ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ಹೊಸನಗರ, ಆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಜನವಿರೋಧಿ ನೀತಿಗಳು ಹಾಗೂ ರೈತರು, ಬಡವರು, ಯುವಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೊಸನಗರ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಬಡವರು, ರೈತರು ಹಾಗೂ ಜನಸಾಮಾನ್ಯರಿಗೆ ಹಲವು ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡದೆ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳು ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪುತ್ತಿಲ್ಲ. ಗ್ರಾಮ ಪಂಚಾಯಿತಿಗಳಿಗೆ ಅವೈಜ್ಞಾನಿಕ ಮೀಸಲಾತಿ ಪ್ರಕಟಿಸಿರುವುದು, ಮಳೆ ಮಾಪನ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸದಿರುವುದು ಹಾಗೂ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.
ಹೊಸನಗರ ತಾಲೂಕಿಗೆ ಸಂಬಂಧಿಸಿದ ಆಡಳಿತಾತ್ಮಕ ಸಮಸ್ಯೆಗಳ ಬಗ್ಗೆಯೂ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ಜವಾಬ್ದಾರಿ ಹೊಂದಿರುವ ಸಾಗರ ಕ್ಷೇತ್ರದ ಶಾಸಕರು ತಾಲೂಕಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯಕ್ಕೆ ವಿದ್ಯುತ್ ಉತ್ಪಾದನೆ ಹಾಗೂ ಪೂರೈಕೆಯಲ್ಲಿ ಪ್ರಮುಖ ಕೊಡುಗೆ ನೀಡುವ ಹೊಸನಗರ ತಾಲೂಕು ನಿರಂತರ ವಿದ್ಯುತ್ ಸಮಸ್ಯೆ ಎದುರಿಸುತ್ತಿರುವುದು ವಿಪರ್ಯಾಸ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮೆಸ್ಕಾಂ ಇಲಾಖೆಯ ವಿದ್ಯುತ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶದ ಜನರು ತೊಂದರೆ ಅನುಭವಿಸುತ್ತಿದ್ದಾರೆ; ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದರ ಜೊತೆಗೆ ರೈತರ ಕೃಷಿ ನೀರಾವರಿಗೆ ಸಬ್ಸಿಡಿ ನೀಡದಿರುವುದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರ, ವಿದ್ಯಾರ್ಥಿಗಳು ಮತ್ತು ಯುವಜನರ ಸಮಸ್ಯೆಗಳು ಹಾಗೂ ಬಡವರ ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಘೋಷಣೆಗಳೊಂದಿಗೆ ಮೆರವಣಿಗೆ
ಚೌಡಮ್ಮ ರಸ್ತೆಯಲ್ಲಿರುವ ತಾಲೂಕು ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ತಾಲೂಕು ಕಚೇರಿಗೆ ತೆರಳಿದ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರು, ಬಡವರು, ಯುವಜನರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಬಿಜೆಪಿ ಮುಖಂಡರಾದ ಉಮೇಶ್ ಕಂಚುಗಾರ್, ಸುರೇಶ್ ಸ್ವಾಮಿರಾವ್, ಕೆ.ಎಸ್. ಪ್ರಶಾಂತ್, ಆರ್.ಟಿ. ಗೋಪಾಲ್, ಯುವರಾಜ್, ನಾಗರತ್ನ ದೇವರಾಜ್, ಪದ್ಮಾ, ಸುರೇಶ್, ನಿರ್ಮಲ, ಗಣೇಶ್, ಶಶಿಕಲಾ, ಸುಮಾ, ಆಶಾ, ಮಾಲಾ, ನಾಗರಾಜ್, ಕಾವ್ಯ ಎಂ.ಎನ್., ಸುಧಾಕರ್, ಎನ್.ಆರ್. ದೇವಾನಂದ್, ತಾಲೂಕು ಅಧ್ಯಕ್ಷ ಸತೀಶ್ ಹಾಲಗದ್ದೆ, ಉಮೇಶ್ ಎ.ವಿ., ಮಲ್ಲಿಕಾರ್ಜುನ್ ಆಲುವಳ್ಳಿ, ವೀರೇಶ್ ಕೆ.ವಿ., ಕೃಷ್ಣಮೂರ್ತಿ, ಮಂಡಾನಿ ಮೋಹನ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.






